ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ-75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಮಾರುತಿ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರರು ಒನ್-ವೇ ನಿಯಮ ಉಲ್ಲಂಘಿಸಿ ಸಂಚರಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಬೈಕ್ ಹಾಗೂ ಕಾರು ಎರಡೂ ಜಖಂಗೊಂಡಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



