ಸುಳ್ಯ: ದೇಶಾದ್ಯಂತ ತೂಗುಸೇತುವೆಗಳ ಸರದಾರ ಎಂದೇ ಖ್ಯಾತಿ ಪಡೆದಿದ್ದ, ಪದ್ಮಶ್ರೀ ಪುರಸ್ಕೃತ ಹಿರಿಯ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ್ (76) ಅವರು ಜುಲೈ 07ರ ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು.

ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಮರಳಿದ್ದ ಅವರಿಗೆ ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿತ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಕಡಿಮೆ ವೆಚ್ಚದಲ್ಲಿ ಹಾಗೂ ಪರಿಸರ ಸ್ನೇಹಿ ತೂಗುಸೇತುವೆಗಳ ನಿರ್ಮಾಣದ ಮೂಲಕ ದೇಶ-ವಿದೇಶಗಳಲ್ಲಿ ವಿಶಿಷ್ಟ ಹೆಗ್ಗಳಿಕೆ ಪಡೆದಿದ್ದ ಡಾ. ಗಿರೀಶ್ ಭಾರದ್ವಾಜ್, ಗ್ರಾಮೀಣ ಪ್ರದೇಶಗಳ ಜನರಿಗೆ ಸುಗಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿ ಜನಮಾನಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದರು.

ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಅವರ ನವೀನ ಸಾಧನೆಗಳು ಹಾಗೂ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರವು ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. .


