ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಒಟ್ಟು ₹4 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ. ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ಮಂಜೂರಾಗಿದೆ.

ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಹೊಸ ಕಟ್ಟಡಗಳ ಅಗತ್ಯವನ್ನು ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಗಮನಕ್ಕೆ ತಂದು ನಿರಂತರವಾಗಿ ಅನುಸರಣೆ ನಡೆಸಿದ ಪರಿಣಾಮ ಈ ಅನುದಾನ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.

ನಿರ್ಮಿತಿ ಕೇಂದ್ರದ ಮೂಲಕ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದ್ದು, ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಸುರಕ್ಷಿತ, ಆಧುನಿಕ ಮತ್ತು ಉತ್ತಮ ವಸತಿ ಹಾಗೂ ಶೈಕ್ಷಣಿಕ ಸೌಲಭ್ಯಗಳು ಲಭ್ಯವಾಗಲಿವೆ.

ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ, ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.




