ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳ ಗ್ರಾಮದಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಮಧುಶ್ರೀ ಎಂದು ಗುರುತಿಸಲಾಗಿದೆ. ಆಕೆ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಾಲೆಯಲ್ಲಿ ಶಿಕ್ಷಕಿ ಬೈದ ಹಿನ್ನೆಲೆಯಲ್ಲಿ ಮನನೊಂದು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್ನಲ್ಲಿ, “ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅವಮಾನ ಸಹಿಸಿಕೊಂಡು ಬದುಕಲು ಸಾಧ್ಯವಾಗುತ್ತಿಲ್ಲ” ಎಂದು ಬರೆದಿರುವುದಾಗಿ ತಿಳಿದುಬಂದಿದೆ.

ಇದೇ ವೇಳೆ, “ಅಮ್ಮ, ಅಕ್ಕ, ತಂಗಿ ಮತ್ತು ತಮ್ಮ ಯಾರದ್ದೂ ತಪ್ಪಿಲ್ಲ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ. ನನ್ನ ಅಮ್ಮನನ್ನು ಯಾರು ಬೈಯ್ಯಬೇಡಿ. ನನಗೆ ಈ ಭೂಮಿಯ ಮೇಲೆ ಬದುಕಲು ಅರ್ಹತೆ ಇಲ್ಲ. ಎಲ್ಲರೂ ನನ್ನನ್ನು ಕ್ಷಮಿಸಿ” ಎಂದು ಭಾವನಾತ್ಮಕವಾಗಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಡೆತ್ ನೋಟ್ ವಶಪಡಿಸಿಕೊಂಡು ಶಾಲೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


