ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಅಲ್ಪಸಂಖ್ಯಾತ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜುಲೈ 9ರ ಗುರುವಾರ ನಡೆದಿದೆ.

ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಹಾಗೂ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಚಿತ್ತಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಷ ಆಹಾರ ಸೇವನೆಯಿಂದಾಗಿ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ನರಳಾಡಿ ಅಸ್ವಸ್ಥರಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ಅದರ ನಿಖರ ಕಾರಣವನ್ನು ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು, ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ಆಸ್ಪತ್ರೆಗೆ ಆಗಮಿಸಿದರು.
ವಸತಿ ಶಾಲೆಯ ಪ್ರಾಚಾರ್ಯ, ಶಿಕ್ಷಕರ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಿದ ಪಾಲಕರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ನಾಗಯ್ಯ ಹಿರೇಮಠ, ಪಿಎಸ್‌ಐ ಮಂಜುನಾಥ ರೆಡ್ಡಿ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಮಕ್ಕಳ ತಜ್ಞ ವೈದ್ಯರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಆಹಾರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಕ್ರಮವೂ ಕೈಗೊಳ್ಳಲಾಗಿದೆ.


