ಕಾರ್ಕಳ: ಕರಿಯಕಲ್ಲು ಪ್ರದೇಶದಲ್ಲಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಗುರುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟಕದ ವ್ಯಾಪ್ತಿಯಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ರಾತ್ರಿ ಸುಮಾರು 10.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದರು.

ಘಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದರಿಂದ ಬೆಂಕಿ ವೇಗವಾಗಿ ವ್ಯಾಪಿಸಿತು. ಪರಿಣಾಮ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದರು. ಕೊನೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಕಾರ್ಯಾಚರಣೆಯಲ್ಲಿ ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹರಿಪ್ರಸಾದ್, ಚಾಲಕ ಶ್ರೀಧರ್, ಭೀಮಪ್ಪ ಹಾಗೂ ಬಸವರಾಜ ಸೇರಿದಂತೆ ತಂಡದ ಸದಸ್ಯರು ಭಾಗವಹಿಸಿದ್ದರು.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.


