Breaking
2 Sep 2026, Wed

ಮಹಿಳೆ ಕೊಲೆ ಪ್ರಕರಣ: ಆರೋಪಿ ರಾಜಪ್ಪಗೆ ಜೀವಾವಧಿ ಶಿಕ್ಷೆ, ₹10 ಸಾವಿರ ದಂಡ

ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.


2022ರ ಡಿಸೆಂಬರ್ 18ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಗೋಡು ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಗ್ರಾಮದ ನಿವಾಸಿ 36 ವರ್ಷದ ರಾಜಪ್ಪ, ಅದೇ ಗ್ರಾಮದ 50 ವರ್ಷದ ಪಾರ್ವತಮ್ಮ ಅವರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ. ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನ್ನ ಕೃತ್ಯ ಬಹಿರಂಗವಾಗುವ ಭಯದಿಂದ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಸಮೀಪದ ಬಾವಿಗೆ ಎಸೆದು ಪರಾರಿಯಾಗಿದ್ದ.


ಪ್ರಕರಣದ ತನಿಖೆಯನ್ನು ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.


ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಯಶವಂತ ಕುಮಾರ್ ತೀರ್ಮಾನಿಸಿದರು.


ಅದರಂತೆ, ಐಪಿಸಿ ಕಲಂ 302 (ಕೊಲೆ) ಹಾಗೂ ಕಲಂ 201 (ಸಾಕ್ಷ್ಯ ನಾಶ) ಅಡಿಯಲ್ಲಿ ಆರೋಪಿ ರಾಜಪ್ಪಗೆ ಜೀವಾವಧಿ ಕಠಿಣ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *