ಕುಂದಾಪುರ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಕುಂದಾಪುರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಬಾಲ ಮುರುಗನ್ ಎಂದು ಗುರುತಿಸಲಾಗಿದೆ.

ಗುರುವಾರ ಕೋಟೇಶ್ವರದ ಕಿನಾರ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ, ಇಡೂರು ಕುಂಜಾಡಿ ಗ್ರಾಮದ ಜನ್ನಾಲು ಕೊಳ್ತಾ ನಿವಾಸಿ ಭರತ್ ಶೆಟ್ಟಿ (33) ಸ್ಥಳದಲ್ಲೇ ಮೃತಪಟ್ಟಿದ್ದರು.

ಪ್ರಕರಣ ದಾಖಲಿಸಿಕೊಂಡ ಕುಂದಾಪುರ ಸಂಚಾರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.







