ಬೆಂಗಳೂರು: ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಬಳಿಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 11ರ ಶನಿವಾರ ನಡೆದಿದೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಕಳೆದ ಕೆಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾದ ಪ್ರಶಾಂತ್ (34) ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಮೊದಲು ಮನೆಯ ಕೋಣೆಯೊಂದರಲ್ಲಿ ತನ್ನ ಮಾವ ಸತೀಶ್ (50) ಅವರೊಂದಿಗೆ ಗಲಾಟೆ ನಡೆಸಿ ಅವರನ್ನು ಹತ್ಯೆಗೈದಿದ್ದಾನೆ. ಗಲಾಟೆಯ ಸದ್ದು ಕೇಳಿ ಬಾಗಿಲು ತೆರೆದ ತಾಯಿ ಮಂಗಳಮ್ಮ (55) ಹಾಗೂ ಅಜ್ಜಿ ನಂಜಮ್ಮ ಘಟನೆ ಬಹಿರಂಗವಾಗುವ ಭೀತಿಯಿಂದ ಅವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿ ಸ್ಥಳದಲ್ಲೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಮಂಗಳಮ್ಮ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದು, ನಂಜಮ್ಮ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು. ಸತೀಶ್ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದು ಅವಿವಾಹಿತರಾಗಿದ್ದರು.

ಕೃತ್ಯದ ಬಳಿಕ ಪ್ರಶಾಂತ್ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಅನುಮಾನಗೊಂಡ ಸ್ಥಳೀಯರು ಮನೆಯ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ ತುರ್ತು ಸೇವೆ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತಂಕಗೊಂಡ ಪ್ರಶಾಂತ್ ಪೊಲೀಸರು ಸ್ಥಳಕ್ಕೆ ಆಗಮಿಸುವ ಮುನ್ನವೇ ಪ್ರಶಾಂತ್ ಮನೆಯೊಳಗೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮಾಹಿತಿ ಪಡೆದ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಹತ್ಯೆ ಹಾಗೂ ಆರೋಪಿಯ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆ ಕುರಿತು ತನಿಖೆ ಮುಂದುವರಿದಿದೆ.





