ಹೊಳಲ್ಕೆರೆ: ಪಟ್ಟಣದ ಹೊರವಲಯದ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಹನುಮಂತ ದೇವರ ಕಣಿವೆ ಬಳಿ ಜುಲೈ 12ರ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿತ್ರದುರ್ಗದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಚಿತ್ರದುರ್ಗದ ಪ್ರಸಿದ್ಧ ಮಾರುತಿ ಗ್ಯಾಸ್ ಏಜೆನ್ಸಿಯ ಮಾಲೀಕರಾದ ಲೋಹಿತ್ ಪ್ರಸಾದ್ ಹಾಗೂ ಅವರ ಪತ್ನಿ ನಿತ್ಯಶ್ರೀ ಎಂದು ಗುರುತಿಸಲಾಗಿದೆ.

ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ, ಹನುಮಂತ ದೇವರ ಕಣಿವೆ ಬಳಿ ಎದುರಿನಿಂದ ಬಂದ ಲಾರಿಯೊಂದಿಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯ ಶವಗಾರಕ್ಕೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.



