ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಈ ಭಾಗದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 169A ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಸಮರ್ಪಕ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳ ಕೊರತೆಯೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.



