ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಹತ್ವದ ಯಶಸ್ಸು ಸಾಧಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ನೌಶಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ದುಲ್ ನಾಸಿರ್ (41) ಎಂದು ಗುರುತಿಸಲಾಗಿದೆ. ಎನ್ಐಎ ತಂಡಗಳು ಎರಡೂ ರಾಜ್ಯಗಳಲ್ಲಿನ ರಹಸ್ಯ ಅಡಗುದಾಣಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿವೆ.

2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ಬಳಿಕ ರಾಜ್ಯ ಸರ್ಕಾರ ಎನ್ಐಎಗೆ ವಹಿಸಿತ್ತು.

ತನಿಖೆಯ ಪ್ರಕಾರ, ಬಂಧಿತ ನೌಶಾದ್ ಹತ್ಯೆ ನಡೆದ ಬಳಿಕ ಪ್ರಮುಖ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ವಾಹನ ಚಾಲಕರಾಗಿ ಸಹಕಾರ ನೀಡಿದ್ದಾನೆ ಎಂದು ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ಎನ್ಐಎ ಈಗಾಗಲೇ 28 ಮಂದಿಯ ವಿರುದ್ಧ ದೋಷಾರೋಪಣಾ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದೆ. ಇತ್ತೀಚಿನ ಇಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನೂ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಈ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ಎನ್ಐಎ ನಗದು ಬಹುಮಾನ ಘೋಷಿಸಿತ್ತು. ಸದ್ಯ ಬಂಧಿತ ನೌಶಾದ್ ಹಾಗೂ ಅಬ್ದುಲ್ ನಾಸಿರ್ ಅವರನ್ನು ಹೆಚ್ಚಿನ ವಿಚಾರಣೆ ಹಾಗೂ ಕಾನೂನು ಪ್ರಕ್ರಿಯೆಗಾಗಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ.



