ಮಂಗಳೂರು: ನಗರದಲ್ಲಿ ಕೆಲಸಕ್ಕೆ ಬಾಂಗ್ಲಾದೇಶಿ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಮೊಯ್ದಿನ್ ಇಸ್ಲಾಂ, ರಸೂಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಜುಲೈ 14 ಮಂಗಳವಾರದಂದು ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತನಿಖೆಯ ವೇಳೆ ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕರೆತಂದು ವಿವಿಧ ಕೆಲಸಗಳಿಗೆ ನಿಯೋಜಿಸುತ್ತಿದ್ದು, ಅವರೊಂದಿಗೆ ಕೆಲ ಬಾಂಗ್ಲಾದೇಶಿ ಪ್ರಜೆಗಳನ್ನೂ ಅಕ್ರಮವಾಗಿ ಕರೆತಂದಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯ್ದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ರಸೂಲ್ ಇಸ್ಲಾಂನನ್ನು ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ಸಮನ್ವಯದಲ್ಲಿ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

ರಸೂಲ್ ಇಸ್ಲಾಂನನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತರಲು ನಗರ ಪೊಲೀಸ್ ತಂಡ ಈಗಾಗಲೇ ಕೋಲ್ಕತ್ತಾಕ್ಕೆ ತೆರಳಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ಹೆಚ್ಚಿನ ಮಾಹಿತಿ ದೊರೆಯುವ ನಿರೀಕ್ಷೆಯಿದೆ.



