ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ತರಾವು ರಸ್ತೆಯ ಪಲ್ಲಿಪಾಡಿ ಪ್ರದೇಶದಲ್ಲಿ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ವೇಳೆ, ಮೊಹಮ್ಮದ್ ನೌಫಾಲ್ ಚಾಲನೆ ಮಾಡುತ್ತಿದ್ದ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳನ್ನು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಮರಳು ಸಾಗಾಟದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.




