Breaking
4 Sep 2026, Fri

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ; ಮಂಗಳೂರಿನಲ್ಲಿ ಆರೋಪಿ ಬಂಧನ, ವಿಷ ಸೇವಿಸಿ ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಾ (21) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೇತನ್ (22)ನನ್ನು ಪೊಲೀಸರು ಶುಕ್ರವಾರ (ಜುಲೈ 17) ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧನದ ವೇಳೆ ಆರೋಪಿ ಇಲಿಪಾಷಾಣ ಸೇವಿಸಿದ್ದರಿಂದ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಆರೋಪಿ ಚೇತನ್ ಮೃತ ಲಾವಣ್ಯಾಳ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳಲು ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ನಲ್ಲಿ ಕುಳಿತಿದ್ದರು. ಈ ವೇಳೆ ಲಾವಣ್ಯಾಳ ಮೇಲೆ ಆರೋಪಿ ತಲವಾರಿನಿಂದ ದಾಳಿ ನಡೆಸಿದ್ದ. ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದರೂ ಬೆನ್ನಟ್ಟಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ತಡೆಯಲು ಮುಂದಾದವರಿಗೂ ಬೆದರಿಕೆ ಹಾಕಿದ ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *