Breaking
5 Sep 2026, Sat

ಏಳು ಕ್ರಿಮಿನಲ್ ಪ್ರಕರಣಗಳ ಆರೋಪಿ ಭಟ್ಕಳದಲ್ಲಿ ಬಂಧನ; ಆರು ತಿಂಗಳ ಬಳಿಕ ಕುಂದಾಪುರ ಪೊಲೀಸರ ಬಲೆಗೆ

ಕುಂದಾಪುರ: ಏಳು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಹಾಗೂ ಕಳೆದ ಆರು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಗ್ರಾಮೀಣ ಪೊಲೀಸರು ಗುರುವಾರ ಮುಂಜಾನೆ ಭಟ್ಕಳದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.


ಬಂಧಿತನನ್ನು ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಗ್ರಾಮದ ಕರ್ಕಿಗುಡ್ಡೆ ನಿವಾಸಿ ಪ್ರಸಾದ್ (22) ಎಂದು ಗುರುತಿಸಲಾಗಿದೆ.


ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯ ವಿರುದ್ಧ ಒಟ್ಟು ಏಳು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಪ್ರಕರಣಗಳು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, ಎರಡು ಕುಂದಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಹಾಗೂ ಒಂದು ಪ್ರಕರಣ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಕೊಲೆ ಯತ್ನ, ಕಳ್ಳತನ ಹಾಗೂ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣಗಳು ಇದರಲ್ಲಿ ಸೇರಿವೆ.


ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಯ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಅಲ್ಲದೆ, 2026ರ ಫೆಬ್ರವರಿಯಲ್ಲಿ ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಮತ್ತೊಂದು ಪ್ರಕರಣವೂ ದಾಖಲಾಗಿತ್ತು. ಇದಾದ ಬಳಿಕ ಆತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಪ್ರಸಾದ್ ಭಟ್ಕಳದಲ್ಲಿ ಅಡಗಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ಮಾರ್ಗದರ್ಶನದಲ್ಲಿ ಜುಲೈ 16ರ ಮುಂಜಾನೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.


ಸಬ್ ಇನ್ಸ್ಪೆಕ್ಟರ್ (ಕಾನೂನು ಮತ್ತು ಸುವ್ಯವಸ್ಥೆ) ನಿರಂಜನ್ ಗೌಡ ಹಾಗೂ ಸಬ್ ಇನ್ಸ್ಪೆಕ್ಟರ್ (ತನಿಖೆ) ಚಂದ್ರಕಲಾ ಎಂ. ಪತ್ತಾರ್ ನೇತೃತ್ವದಲ್ಲಿ, ಪೊಲೀಸ್ ಕಾನ್ಸ್ಟೆಬಲ್ಗಳಾದ ಶ್ರೀಧರ್ ಪಾಟೀಲ್ ಮತ್ತು ಕಿರಣ್ ಬಿ. ಪಾಟೀಲ್ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.


ಬಂಧಿತನನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *