ಕುಶಾಲನಗರ: ಸಾರ್ವಜನಿಕರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಸಿ, ಅವುಗಳನ್ನು ಸೈಬರ್ ವಂಚನೆಗೆ ಬಳಸುತ್ತಿದ್ದ ಆರೋಪದಡಿ ಕೊಡಗು ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಖದೀಮನೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಈಚಲುಬೀಡು ಗ್ರಾಮದ ಎಸಳೂರು ನಿವಾಸಿ ಕರಣ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ವಿದ್ಯಾರ್ಥಿ ವೇತನ, ಮನೆ ಸಾಲ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸುತ್ತಿದ್ದ. ಬಳಿಕ ಕಮಿಷನ್ ನೀಡುವುದಾಗಿ ಆಮಿಷವೊಡ್ಡಿ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಸುತ್ತಿದ್ದ. ನಂತರ ಆ ಖಾತೆಗಳ ಎಟಿಎಂ ಕಾರ್ಡ್ ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ವಿವರಗಳನ್ನು ತನ್ನ ಬಳಿಯೇ ಇಟ್ಟುಕೊಂಡು, ಸೈಬರ್ ವಂಚನೆಯಿಂದ ಬಂದ ಹಣವನ್ನು ವರ್ಗಾಯಿಸಲು ಬಳಸುತ್ತಿದ್ದ ಎನ್ನಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಈ ಬ್ಯಾಂಕ್ ಖಾತೆಗಳ ಮೂಲಕ ಸುಮಾರು ₹35 ಲಕ್ಷಕ್ಕೂ ಅಧಿಕ ಕಾನೂನುಬಾಹಿರ ಹಣದ ವರ್ಗಾವಣೆ ನಡೆದಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಕೊಡಗು ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಮುಂದುವರಿಸಿದ್ದಾರೆ.


