Breaking
19 Jul 2026, Sun

ಲಾವಣ್ಯ ಮನೆಗೆ ಜನಪ್ರತಿನಿಧಿಗಳ ಭೇಟಿ; ಕುಟುಂಬಕ್ಕೆ ಸಾಂತ್ವನ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಕ್ಯಪದವು ಸಮೀಪದ ಮೈರ ನಿವಾಸಿ, ಹತ್ಯೆಗೀಡಾದ ಯುವತಿ ಲಾವಣ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತಳ ಪೋಷಕರು ಹಾಗೂ ಕುಟುಂಬದವರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದ ಜನಪ್ರತಿನಿಧಿಗಳು, ಲಾವಣ್ಯ ಅವರ ಹತ್ಯೆ ಅತ್ಯಂತ ನೋವು ಮತ್ತು ಆಘಾತಕಾರಿ ಘಟನೆ ಎಂದು ಖಂಡಿಸಿದರು. ಪ್ರಕರಣದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ ಅವರು, ಕುಟುಂಬಕ್ಕೆ ನ್ಯಾಯ ದೊರಕಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಅವರು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೃತ ಲಾವಣ್ಯ ಅವರ ಆತ್ಮಕ್ಕೆ ಶಾಂತಿ ಕೋರಿ, ಶೋಕಸಂತಪ್ತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, “ಘಟನೆಯ ವೇಳೆ ನಾನು ಒಡಿಶಾದ ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ಭಾಗಿಯಾಗಿದ್ದೆ. ಘಟನೆ ತಿಳಿದ ತಕ್ಷಣ ಪೊಲೀಸ್ ಅಧಿಕಾರಿಗಳಿಗೆ ಆರೋಪಿಯನ್ನು ಕೂಡಲೇ ಬಂಧಿಸಿ ಸಮಗ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಲಾವಣ್ಯ ಅವರ ಕುಟುಂಬದೊಂದಿಗೆ ಸದಾ ನಾವಿದ್ದೇವೆ,” ಎಂದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, “ಪ್ರೇಮದ ಹೆಸರಿನಲ್ಲಿ ಅಮಾಯಕ ಯುವತಿಯನ್ನು ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕುಟುಂಬ ಸದಸ್ಯರು ಆಗ್ರಹಿಸಿದ್ದು, ನಾವು ಕೂಡ ಕಠಿಣ ಶಿಕ್ಷೆಗೆ ಒತ್ತಾಯಿಸುತ್ತೇವೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, “ಲಾವಣ್ಯ ಅವರ ಹತ್ಯೆ ಅತ್ಯಂತ ನೋವು ತಂದಿದೆ. ಈ ಕೃತ್ಯ ಎಸಗಿದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಮೃತರ ಕುಟುಂಬದ ದುಃಖದಲ್ಲಿ ನಾವು ಭಾಗಿಯಾಗಿದ್ದು, ಅವರೊಂದಿಗೆ ಸದಾ ನಾವಿದ್ದೇವೆ,” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಸುರೇಶ್ ಮೈರ, ಚಿದಾನಂದ ಕಕ್ಯ, ವಸಂತ ಉಳಿ, ರಂಜಿತ್ ಮೈರ, ಅಜಿತ್ ಶೆಟ್ಟಿ ಕಾರಿಂಜ, ಸತೀಶ್ ಶೆಟ್ಟಿ ಮದ್ವ, ಯಶವಂತ ಕಜೆಕಾರು, ಶಶಿಕಾಂತ್ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *