ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದ ಕೆರೆಹಳ್ಳಿ–ಶಹಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿ–13ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಷ್ಟಗಿ ಮಾರ್ಗದಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಹುಲಿಗಿ ಗ್ರಾಮದ ಖಾದರ್ ಖಾನ್ (75) ಹಾಗೂ ಅದೇ ಕುಟುಂಬದ ಸುಮಾರು 70 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ತೀವ್ರತೆಗೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇತರ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಹಾಗೂ ರಸ್ತೆ ಬದಿಯಲ್ಲಿ ಭಾರೀ ವಾಹನಗಳ ನಿಲುಗಡೆಗೆ ನಿಯಂತ್ರಣ ಹೇರಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

