ಪುತ್ತೂರು: ಪುತ್ತೂರಿನ ಬಹುಮುಖ ಪ್ರತಿಭೆ, ಶಿಕ್ಷಕಿ, ಸಾಹಿತಿ ಹಾಗೂ ಸಂಘಟಕಿ ಶಾಂತಾ ಪುತ್ತೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ವತಿಯಿಂದ ನೀಡಲಾಗುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026ಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಕಾರ್ಯಕ್ರಮವು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ (ಐಎಎಸ್) ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಕಾಸರಗೋಡಿನ ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸಹಕಾರದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ.

ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಕ್ರಿಯಾಶೀಲರಾಗಿರುವ ಶಾಂತಾ ಪುತ್ತೂರು ಅವರು ಅನೇಕ ಹೊಸ ಪ್ರತಿಭೆಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ನೀಡಿ ಗೌರವಿಸಲಾಗುತ್ತಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


