Breaking
22 Jul 2026, Wed

ಶಾಲಾ ಬಸ್‌ಗೆ ಮರ ಬಿದ್ದು ದುರಂತ: ಗಂಭೀರವಾಗಿ ಗಾಯಗೊಂಡಿದ್ದ 6 ವರ್ಷದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬಂಟ್ವಾಳ: ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲಡ್ಕ ಶ್ರೀರಾಮ ಶಾಲೆಯ 6 ವರ್ಷದ ವಿದ್ಯಾರ್ಥಿನಿ ಚಿರಾಣ್ವಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ, ಕಲ್ಲೆಟ್ಟಿ ಗ್ರಾಮದ ಶ್ರೀ ಕಾನಲ್ತಾಯ ದೈವಸ್ಥಾನದ ಸಮೀಪದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ವಿದ್ಯಾರ್ಥಿನಿ ಚಿರಾಣ್ವಿ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಇನ್ನೂ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೀಡಾದ ಬಸ್ ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ್ದಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಧಾವಿಸಿ ಬಸ್‌ನೊಳಗಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಈ ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಅಧಿಕೃತ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *