ಉಳ್ಳಾಲ: ಮುಡಿಪು ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತರನ್ನು ಅಳೇಕಲ ನಿವಾಸಿ ಅಬ್ದುಲ್ ಖಾದರ್ (66) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ರಸ್ತೆ ದಾಟುತ್ತಿದ್ದ ವೇಳೆ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕಾರು ಚಾಲಕರೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


