Breaking
27 Jul 2026, Mon

ಅಪಾಯಕಾರಿ ಮರದ ಕಾಲುಸಂಕಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ; ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದಲ್ಲಿರುವ ಅಪಾಯಕಾರಿ ಮರದ ಕಾಲುಸಂಕಕ್ಕೆ ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಮನು ಬಿ.ಕೆ. ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪ ಅವರು ಭಾನುವಾರ ಸಂಜೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.


ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಈ ಕಾಲುಸಂಕದ ದುಸ್ಥಿತಿ ಕುರಿತು ವ್ಯಾಪಕ ಚರ್ಚೆಯಾಗಿದ್ದು, ಬಳಿಕ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು. ಇದರ ಬೆನ್ನಲ್ಲೇ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ನ್ಯಾಯಾಧೀಶರು ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.


ಕಾಲುಸಂಕವನ್ನು ಅವಲಂಬಿಸಿರುವ ಕುಟುಂಬಗಳ ಸಂಖ್ಯೆ, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ವಿಶೇಷ ಚೇತನರು ಹಾಗೂ ವಿಧವೆಯರ ಪ್ರತ್ಯೇಕ ಮಾಹಿತಿಯನ್ನು ಸಂಗ್ರಹಿಸಿ ಸೋಮವಾರ ಮಧ್ಯಾಹ್ನದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಹಾಗೂ ಗ್ರಾಮಾಡಳಿತಾಧಿಕಾರಿಗೆ ನ್ಯಾಯಾಧೀಶರು ಸೂಚಿಸಿದರು.


ನ್ಯಾಯಾಧೀಶರ ಈ ಸ್ಥಳ ಭೇಟಿ ಹಾಗೂ ಪರಿಶೀಲನೆಯಿಂದ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬರೆಮೇಲು–ನಡುಗುಡ್ಡೆ ಭಾಗದ ಸೇತುವೆ ನಿರ್ಮಾಣದ ಬೇಡಿಕೆ ಈಡೇರುವ ಸಾಧ್ಯತೆ ಇದೆ ಎಂಬ ಆಶಾಭಾವನೆ ಸ್ಥಳೀಯರಲ್ಲಿ ಮೂಡಿದೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆನಂದ್, ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ, ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ, ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್, ಗ್ರಾಮಾಡಳಿತಾಧಿಕಾರಿ ರನಿತಾ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ದಲಿತ ಮುಖಂಡ ಶೇಖರ್ ಲಾಯಿಲ ಹಾಗೂ ಗ್ರಾಮ ಸಹಾಯಕ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *