ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಬೇವಿಂಜೆ ಪ್ರದೇಶದಲ್ಲಿ ಸೋಮವಾರ ಸಂಜೆ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದ ವೇಳೆ ತಮಿಳುನಾಡು ಮೂಲದ 41 ವರ್ಷದ ಚಾಲಕ ಸಿದ್ದಿಕ್ ಲಾರಿಯ ಕ್ಯಾಬಿನ್ ಒಳಗೆ ಸಿಲುಕಿಕೊಂಡಿದ್ದರು. ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು ಹಾಗೂ ಕಾಸರಗೋಡು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ಹೈಡ್ರಾಲಿಕ್ ಕಟ್ಟರ್ ಬಳಸಿ ಲಾರಿಯ ಕ್ಯಾಬಿನ್ ಭಾಗಗಳನ್ನು ಕತ್ತರಿಸಿ, ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದರು. ಅದೃಷ್ಟವಶಾತ್, ಸಿದ್ದಿಕ್ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಮತ್ತು ಸಂಬಂಧಿತ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಿ ಸಂಚಾರವನ್ನು ಪುನಃ ಆರಂಭಿಸಿದರು.


