ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಜು. 28ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಅರಳಗುಡ್ಡೆ ಎಂಬಲ್ಲಿ ನಡೆದಿದೆ.

ಪ್ರಶಾಂತ್, ಮೋಹನ್ ಹಾಗೂ ಚಾಲಕ ನಿತಿನ್ ಅವರು ಸೆಂಟ್ರಿಂಗ್ ಕೆಲಸ ಮುಗಿಸಿ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅರಳಗುಡ್ಡೆ ಸಮೀಪ ಈ ಅವಘಡ ಸಂಭವಿಸಿದೆ. ಚಾಲಕ ನಿತಿನ್ ಏಕಾಏಕಿ ರಿವರ್ಸ್ ತೆಗೆದುಕೊಳ್ಳಲು ಮುಂದಾದಾಗ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಮೋಹನ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


