ಹುಣಸೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 275ರ ಎಮ್ಮೆಕೊಪ್ಪಲು ಗ್ರಾಮದ ಪುಟ್ಟನಕೆರೆ ಬಳಿ ಗೂಡ್ಸ್ ವಾಹನ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 27 ವರ್ಷದ ಫೋಟೋಗ್ರಾಫರ್ ಅಭಿಲಾಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ಅರವಿಂದ ನಗರದ ನಿವಾಸಿಯಾಗಿದ್ದ ಅಭಿಲಾಷ್ ಕೆಲಸದ ನಿಮಿತ್ತ ಹುಣಸೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಅಭಿಲಾಷ್ ಅವರ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಅವರ ವಿವಾಹ ನಿಶ್ಚಯವಾಗಿದ್ದು, ನವೆಂಬರ್ನಲ್ಲಿ ಮದುವೆ ನಡೆಯಬೇಕಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಹುಣಸೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಮಾಧು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಎರಡೂ ವಾಹನಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.



