ರಾಯಚೂರು: ತೆಲಂಗಾಣದ ಹಿಂದುಪುರ ಸಮೀಪದ ಟೈರ್ ರೋಡ್ ಬಳಿ ಬುಧವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಯುವ ಮುಖಂಡ ಚೇತನ ಕಡಗೋಲ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚೇತನ ಕಡಗೋಲ ಹಾಗೂ ಅವರ ಸ್ನೇಹಿತ ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ರಾಯಚೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಸ್ನೇಹಿತ ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಯತ್ನಿಸಿದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಿದ್ದು ಸಮೀಪದ ಮನೆಯ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಚೇತನ ಕಡಗೋಲ ಅವರ ಕೈ, ಕಾಲು ಹಾಗೂ ಕುತ್ತಿಗೆ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಚಲಾಯಿಸುತ್ತಿದ್ದ ಸ್ನೇಹಿತನ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.



