ಕುಂದಾಪುರ: ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ಶುಕ್ರವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಬಾರ್ಕೂರು ಕಚ್ಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (45) ಎಂದು ಗುರುತಿಸಲಾಗಿದೆ. ಅವರು ಹಣಕಾಸು ವ್ಯವಹಾರ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದ ಮೊದಲ ಪತ್ನಿಯಿಂದ ಪ್ರತ್ಯೇಕವಾಗಿ ಬಾರ್ಕೂರು ಮೂಲದ ಮತ್ತೊಬ್ಬ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರ ಮುಂಜಾನೆ ಸುಮಾರು 3.30 ಗಂಟೆ ವೇಳೆಗೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರಕ್ಕೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ರಿಚರ್ಡ್ ಮಸ್ಕರೇನಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ಘಟನೆಯ ವೇಳೆ ಐವನ್ ಅವರೊಂದಿಗೆ ಇದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ತಿಳಿದುಬಂದಿದ್ದು, ಆತನ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಹಣಕಾಸು ಅಥವಾ ಇತರೆ ವೈಯಕ್ತಿಕ ವ್ಯವಹಾರಗಳ ವೈಮನಸ್ಸು ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಜಯರಾಮ ಗೌಡ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


