ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಿಲಾಮ್ ಗ್ರಾಮದಲ್ಲಿ ಶುಕ್ರವಾರ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ವಲಸೆ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಮೂಲಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಮೃತ ಕಾರ್ಮಿಕನನ್ನು ಭೂಪಿಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಇದೇ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಪಕ್ ಎಂಬ ಮತ್ತೊಬ್ಬ ಕಾರ್ಮಿಕ ಶನಿವಾರವೇ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಕೆಲ್ಲಂ ಪ್ರದೇಶದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಅಪರಿಚಿತ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ದಾಳಿಯ ಹೊಣೆಯನ್ನು ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಘಟನೆಯನ್ನು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರವಾಗಿ ಖಂಡಿಸಿದ್ದಾರೆ. ಪೊಲೀಸ್ ಮಹಾನಿರ್ದೇಶಕ ನಲಿನ್ ಪ್ರಭಾತ್ ಹಾಗೂ ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿರುವ ಅವರು, ದಾಳಿಕೋರರನ್ನು ಶೀಘ್ರ ಬಂಧಿಸುವಂತೆ ಹಾಗೂ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಭದ್ರತಾ ಪಡೆಗಳಿಗೆ ನಿರ್ದೇಶನ ನೀಡಿದ್ದಾರೆ.


