ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್ರಾಜ್, ಅವರ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎರಡು ಕಾರುಗಳಲ್ಲಿ ಬಂದ ಆರೋಪಿಗಳು ಅವರನ್ನು ತಡೆದು ಮಾತಿನ ಚಕಮಕಿ ನಡೆಸಿದ್ದಾರೆ ಎನ್ನಲಾಗಿದೆ.

ಬಳಿಕ ಪವನ್ ಕುಮಾರ್ ಮೇಲೆ ಕೈ ಮತ್ತು ಕಾಲಿನಿಂದ ಹಲ್ಲೆ ನಡೆಸಿ, ಆರೋಪಿಗಳಲ್ಲಿ ಒಬ್ಬ ಮೆಟಲ್ ಪಂಚ್‌ನಿಂದ ಮುಖಕ್ಕೆ ಹೊಡೆದ ಪರಿಣಾಮ ಅವರ ಮೂಗಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯಶ್ರಾಜ್ ಹಾಗೂ ಶ್ರೇಯಸ್ ಅವರ ಮೇಲೂ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಮಣಿಪಾಲ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗ ಮೂಲದ ಅಕ್ಷಯ್ ಎ., ಪುನೀತ್ ಎಸ್., ಶಮಂತ್ ಕೆ.ಆರ್. ಹಾಗೂ ಯಶ್ವಂತ್ ಬಿ.ಜೆ. ಅವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಮಣಿಪಾಲ ಪೊಲೀಸ್ ಉಪನಿರೀಕ್ಷಕ ಬಿ.ಎನ್. ತಿಮ್ಮೇಶ್ ಅವರ ನೇತೃತ್ವದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.





