ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಸೈಫ್ ಮುಲ್ಲಾ (29), ಅವರ ನಾಲ್ಕು ವರ್ಷದ ಪುತ್ರಿ ಸಿಜಾ ಸೈಫ್ ಮುಲ್ಲಾ ಹಾಗೂ ಸ್ನೇಹಿತ ಇಮ್ತಿಯಾಜ್ ಬಡಗಾಂವ್ (35) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಹಿಡಕಲ್ನಿಂದ ಗೋಕಾಕ್ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಗೋಕಾಕ್ ಫಾಲ್ಸ್ನಿಂದ ಕೊಣ್ಣೂರಿನತ್ತ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗಳು ಹಾಗೂ ಸ್ನೇಹಿತರು ಕೊಣ್ಣೂರು ಪಟ್ಟಣದ ಕರೆಮ್ಮಾ ದೇವಸ್ಥಾನದ ಸಮೀಪ ತಲುಪಿದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಕುರಿತು ಗೋಕಾಕ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


