ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಸೂರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ, ನಾಲ್ವರು ಮಕ್ಕಳ ಸಹಿತ, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಸೂರಿಕುಮೇರು ತಲುಪುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳೀಯರ ಆರೋಪದಂತೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಯ ಅಸಮರ್ಪಕ ವ್ಯವಸ್ಥೆಯೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಈ ಭಾಗದಲ್ಲಿ ಇಂತಹ ಅಪಘಾತಗಳು ಪದೇಪದೇ ಸಂಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರಸ್ತೆ ಕಾಮಗಾರಿಯನ್ನು ಸುರಕ್ಷಿತವಾಗಿ ಪೂರ್ಣಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



