ಬೆಳ್ತಂಗಡಿ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲಾ ಆವರಣದಲ್ಲಿ ನಿರ್ಮಿಸಿರುವ ಇಂಗು ಗುಂಡಿಗಳಿಂದ ಸುತ್ತಲಿನ ಪರಿಸರಕ್ಕೆ ಪ್ರಯೋಜನವಾಗಿದೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಅರಿವು ಮೂಡಿದೆ ಎಂದು ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಗಿಡಗಳನ್ನು ನೆಡುವುದು, ಸ್ವಚ್ಛತೆಯನ್ನು ಕಾಪಾಡುವುದು ಹಾಗೂ ಮಳೆ ನೀರನ್ನು ಇಂಗಿಸುವಂತಹ ಚಟುವಟಿಕೆಗಳಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಬಹುದು ಎಂದು ತಿಳಿಸಿದರು.

ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸುಲೇಮಾನ್ ಭೀಮಂಡೆ ಮಾತನಾಡಿ, ಪರಿಸರ ಸಂರಕ್ಷಣೆ ಎನ್ನುವುದು ಒಂದು ದಿನದ ಕಾರ್ಯಕ್ರಮವಾಗಿದೆ ಅದು ನಿರಂತರ ಪ್ರಕ್ರಿಯೆಯಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮಿಂದಲೇ ಆಗಬೇಕು ಪರಿಸರದೊಂದಿಗೆ ಹೊಂದಾಣಿಕೆಯ ಬದುಕು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು, ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷರಾದ ಸಂಜೀವ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಕಿ ಕೋಕಿಲ ಬಹುಮಾನ ಪಟ್ಟಿ ವಾಚಿಸಿದರು. ಶಿಕ್ಷಕ ಕಿರಣ್ ಸ್ವಾಗತಿಸಿದರು. ಉಜಿರೆ ವಲಯದ ಮೇಲ್ವಿಚಾರಕರಾದ ಪ್ರೇಮ್ ಪ್ರಸಾದ್ ಧನ್ಯವಾದ ಸಲ್ಲಿಸಿದ್ದು, ಶಿಕ್ಷಕ ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.


