ಬೆಳ್ತಂಗಡಿ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಶ್ರೀಧರ್ ಕೆ.ವಿ. ಉದ್ಘಾಟಿಸಿದರು. ಮಾತನಾಡಿದ ಅವರು, ವಿದ್ಯಾರ್ಥಿಗಳು ಈಗಿಂದಲೇ ಸೇವಾ ಮನೋಭಾವ, ಶಿಸ್ತು, ಮೌಲ್ಯ ಹಾಗೂ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿವೃತ್ತ ಮುಖ್ಯೋಪಾಧ್ಯಾಯ ಸೋಮಶೇಖರ ಶೆಟ್ಟಿ ಮಾತನಾಡಿ, ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ಸಹವಾಸದಂತೆ ವ್ಯಕ್ತಿತ್ವವಿರುತ್ತದೆ ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡಾಗ ಒಳ್ಳೆಯ ಗುಣವಿರುತ್ತದೆ ಹಾಗೂ ಯಾವುದೇ ಸಂದರ್ಭದಲ್ಲೂ ಮಾದಕ ವಸ್ತುಗಳು ಮತ್ತು ದುಶ್ಚಟಗಳಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಇಂಟ್ರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಜೊತೆಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ 8, 9 ಮತ್ತು 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಪ್ರಮೀಳಾ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಘೀರ ಸ್ವಾಗತಿಸಿ, ಚೇತನ ಧನ್ಯವಾದ ಸಲ್ಲಿಸಿದ್ದು, ಆತ್ಮಿ ಮತ್ತು ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು.


