Breaking
8 Aug 2026, Sat

ಕೊಟ್ಟಿಗೆಹಾರ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಒಂದೇ ಗ್ರಾಮದ ಮೂವರು ಯುವಕರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಆ.08) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.


ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ಜ್ಞಾನೇಶ, ಮೋಹನ ಹಾಗೂ ಗುರುಕಿರಣ್ ಮೃತ ದುರ್ದೈವಿಗಳು. ಇದೇ ಕಾರಿನಲ್ಲಿದ್ದ ಪ್ರೇಮ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಮೃತರು ಹಾಗೂ ಗಾಯಾಳುಗಳು ಧರ್ಮಸ್ಥಳ ಕ್ಷೇತ್ರದ ದರ್ಶನಕ್ಕಾಗಿ ತುಮಕೂರಿನಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *