Breaking
8 Aug 2026, Sat

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ KSRTC ಬಸ್ ಪಲ್ಟಿ: ಇಬ್ಬರು ಸಾವು

ರಾಮನಗರ: ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.


ರಾಮನಗರ ತಾಲೂಕಿನ ಅವರಗೆರೆ ಗೇಟ್ ಸಮೀಪ ಈ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಸೈನ್ ಬೋರ್ಡ್ಗೆ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ಬಸ್ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಅಪಘಾತದಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿದು ಬಿಡದಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.


ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *