ಅರಂತೋಡು: ಮಂಗಳೂರಿನಿಂದ ಮೈಸೂರಿನತ್ತ ಗೇರುಬೀಜ ಸಾಗಿಸುತ್ತಿದ್ದ ಲಾರಿಯೊಂದು ಸಂಪಾಜೆ ಚೌಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಪಲ್ಟಿಯಾದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.

ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಲಾರಿಯನ್ನು ತೆರವುಗೊಳಿಸಿದರು. ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನರಾರಂಭಿಸಲು ಅವಕಾಶ ಮಾಡಿಕೊಡಲಾಯಿತು.

ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.



