ಹಾವೇರಿ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 18 ವರ್ಷದ ಯುವಕ ಮೃತಪಟ್ಟಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಆ.10ರ ಸೋಮವಾರ ನಡೆದಿದೆ.

ಮೃತರನ್ನು ಬಾವರಸಿಂಗ್ ರಜಪೂತ್ (18) ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾವೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಗಾಯಗೊಂಡ 20ಕ್ಕೂ ಅಧಿಕ ಪ್ರಯಾಣಿಕರನ್ನು ಸ್ಥಳೀಯರ ನೆರವಿನಿಂದ ಹಾಗೂ ತುರ್ತು ಸೇವೆಗಳ ಮೂಲಕ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್‌ನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಬಂಧ ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


