ಕಾಸರಗೋಡು ಕಲೆಕ್ಟರೇಟ್ ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಎಡತೋಡ್ ನಿವಾಸಿ ಆಶಾಲತಾ (42) ಮೃತರು.

ಆಗಸ್ಟ್ 7ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆಶಾಲತಾ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಕಣ್ಣೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೋಝಿಕ್ಕೋಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಆಶಾಲತಾ ಅವರು ಇತ್ತೀಚೆಗೆ ಕಲೆಕ್ಟರೇಟ್ನ ಕಂದಾಯ ಇಲಾಖೆಯಿಂದ ಎಂಡೋಸಲ್ಫಾನ್ ಸೆಲ್ಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ. ಹೊಸ ವಿಭಾಗದಲ್ಲಿ ಸಿಬ್ಬಂದಿ ಕೊರತೆಯಿದ್ದ ಕಾರಣ ಕೆಲಸದ ಹೊರೆ ಹೆಚ್ಚಾಗಿತ್ತು ಎಂದು ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಅಲ್ಲದೆ, ಕೆಲಸದ ಒತ್ತಡದ ಜತೆಗೆ ಹಿರಿಯ ಅಧಿಕಾರಿಗಳಿಂದ ಮಾನಸಿಕ ಕಿರುಕುಳ ಎದುರಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆಶಾಲತಾ ಅವರ ಸಾವಿಗೆ ಕೆಲಸದ ಒತ್ತಡ ಹಾಗೂ ಮಾನಸಿಕ ಕಿರುಕುಳ ಕಾರಣವಾಗಿರಬಹುದೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಕಾಸರಗೋಡು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


