ಬೆಂಗಳೂರು: ಭಯೋತ್ಪಾದಕರು ಎಂದು ಶಂಕಿಸಿ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್‌ಗಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಎಇಸಿಎಸ್ ಲೇಔಟ್‌ನಲ್ಲಿ ನಡೆದಿದೆ.

ಹಲ್ಲೆಗೊಳಗಾದ ಸಂದೀಪ್ ಕುಮಾರ್ ಮತ್ತು ಅವರ ಸ್ನೇಹಿತ ರೋಹಿತ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಎಚ್‌ಎಎಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಆ.6ರಂದು ಮುಂಜಾನೆ ಸ್ನೇಹಿತನನ್ನು ಭೇಟಿಯಾಗಲು ಎಇಸಿಎಸ್ ಲೇಔಟ್‌ಗೆ ತೆರಳಿದ್ದ ಸಂದೀಪ್ ಕುಮಾರ್ ಹಾಗೂ ರೋಹಿತ್ ಕುಮಾರ್, ಐಸ್‌ಕ್ರೀಂ ಅಂಗಡಿಯೊಂದರ ಮುಂಭಾಗದಲ್ಲಿ ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಇಬ್ಬರನ್ನೂ ಉದ್ದೇಶಿಸಿ, “ನೀವು ಭಯೋತ್ಪಾದಕರಾ?” ಎಂದು ಪ್ರಶ್ನಿಸಿದ್ದಾನೆ.

ಅದಕ್ಕೆ ಇಬ್ಬರೂ ತಾವು ಭಯೋತ್ಪಾದಕರಲ್ಲ, ಭಾರತೀಯ ನಾಗರಿಕರು ಎಂದು ಉತ್ತರಿಸಿದ್ದಾರೆ. ಬಳಿಕ ಆರೋಪಿ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಸಂದೀಪ್ ಮತ್ತು ರೋಹಿತ್, “ಯಾವ ಅಧಿಕಾರದ ಮೇಲೆ ಗುರುತಿನ ಚೀಟಿ ಕೇಳುತ್ತಿದ್ದೀರಿ? ನಮ್ಮನ್ನು ವಿಚಾರಣೆ ಮಾಡಲು ನೀವು ಯಾರು?” ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇದರಿಂದ ಕೋಪಗೊಂಡ ಅಪರಿಚಿತ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬಳಿಕ ಬೇಸ್‌ಬಾಲ್ ಬ್ಯಾಟ್‌ನಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆ ನಡೆಸಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಎಚ್‌ಎಎಲ್ ಠಾಣೆ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ವಿವಿಧ ಮಾಹಿತಿಗಳ ಆಧಾರದ ಮೇಲೆ ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.


