ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಹಾಗೂ ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಸೋರೆಕುಂಟೆ ಬಳಿ ಮಂಗಳವಾರ(ಆ.11) ನಡೆದಿದೆ.

ಮೃತರನ್ನು ಬೊಲೆರೋದಲ್ಲಿದ್ದ ಷಣ್ಮುಗ (50) ಹಾಗೂ ಅವರ ಜೊತೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತರ ಹೆಸರು ಹಾಗೂ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.

ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ, ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಕೋರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಕ್ರೇನ್ ಸಹಾಯದಿಂದ ರಸ್ತೆಯಲ್ಲೇ ನಜ್ಜುಗುಜ್ಜಾಗಿದ್ದ ಬೊಲೆರೋವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಕುರಿತು ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


