Breaking
29 Sep 2026, Tue

ಪಡಂಗಡಿ ಸಹಕಾರ ಸಂಘದ 4 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ

ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನೇರ ನೇಮಕಾತಿ ಮೂಲಕ ನಾಲ್ಕು ಹುದ್ದೆಗಳನ್ನು ಭರ್ತಿ ಮಾಡಲು ಆರಂಭಿಸಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಮೀಸಲಾತಿ ನಿಯಮಗಳ ಪಾಲನೆಯಾಗದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸುವಂತೆ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಸೂಚನೆ ನೀಡಿದ್ದಾರೆ.

ಸಂಘದಲ್ಲಿ ಒಂದು ಮಾರಾಟ ಗುಮಾಸ್ತ ಹಾಗೂ ಮೂರು ಕಿರಿಯ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ಕುರಿತು ಪತ್ರಿಕಾ ಪ್ರಕಟಣೆಯನ್ನೂ ನೀಡಲಾಗಿತ್ತು.

ಬೆಳ್ತಂಗಡಿ ತಹಶೀಲ್ದಾರರ ನೇತೃತ್ವದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರ ಸಮಾಲೋಚನಾ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿಗೆ ಸಂಬಂಧಿಸಿದ ಸರಕಾರಿ ಆದೇಶಗಳನ್ನು ಪಾಲಿಸಲಾಗಿಲ್ಲ ಎಂಬ ವಿಚಾರ ಗಮನಕ್ಕೆ ಬಂದಿದೆ.

ಯಾವುದೇ ಹುದ್ದೆಯನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸದಿರುವ ಕುರಿತು ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ಸಭೆಯಲ್ಲಿ ಗಮನ ಸೆಳೆದರು.

ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ದಲಿತ ಮುಖಂಡರು ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು, ಮೀಸಲಾತಿ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಿ ನೇಮಕಾತಿ ನಡೆಸುವಂತೆ ಒತ್ತಾಯಿಸಿದರು.

ಸಭೆಯ ನಿರ್ಧಾರದ ಹಿನ್ನೆಲೆಯಲ್ಲಿ ಇದೀಗ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆಯುತ್ತಿದ್ದ ನಾಲ್ಕು ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *