Breaking
15 Aug 2026, Sat

ಮುಗೇರಡ್ಕ ಸೇತುವೆ ಸಂಪರ್ಕ ರಸ್ತೆ: ಎನ್‌ಎಚ್‌-75 ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಮೊಗ್ರು: ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸೇತುವೆಗೆ ರಾಷ್ಟ್ರೀಯ ಹೆದ್ದಾರಿ-75ರ ಸಂಪರ್ಕ ರಸ್ತೆ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ತಂಡ ಅ.14ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ರಸ್ತೆಗೆ ಸಂಪರ್ಕ ಕಲ್ಪಿಸುವ ಸಂದರ್ಭ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಗಮನಕ್ಕೆ ತಂದಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಂಸದರು ಹಾಗೂ ಶಾಸಕರು, ಸ್ಟ್ರಕ್ಚರಲ್ ಇಂಜಿನಿಯರ್ ಪ್ರಸನ್ನ ದರ್ಬೆ ಅವರನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ಘಟಕದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ ಅವರೊಂದಿಗೆ ಚರ್ಚಿಸಲು ಸೂಚಿಸಿದ್ದರು.

ಅ.13ರಂದು ನಡೆದ ಚರ್ಚೆಯಲ್ಲಿ ಕಾರಣಿಕದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದ ಭಕ್ತರಿಗೆ ಅನುಕೂಲವಾಗುವಂತೆ ಹಾಗೂ ಭವಿಷ್ಯದ ಪ್ರವಾಸೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಜಾಗ ಕಾಯ್ದಿರಿಸುವುದು ಮತ್ತು ನಿರ್ಮಾಣ ಹಂತದಲ್ಲಿರುವ ಸೇತುವೆಗೆ ಸಂಪರ್ಕ ರಸ್ತೆ ಕಲ್ಪಿಸುವ ಕುರಿತು ಚರ್ಚಿಸಲಾಯಿತು.

ಅ.14ರಂದು ಪ್ರಸನ್ನ ದರ್ಬೆ ಅವರು ಎನ್‌ಎಚ್‌ಎಐ ಇಂಜಿನಿಯರ್‌ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಸಂಪರ್ಕ ರಸ್ತೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಗತ್ಯ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿದರು.

ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರಿಗೆ ಸ್ಥಳೀಯರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಪುತ್ತೂರು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅದೇಶ್ ಶೆಟ್ಟಿ ಉಪ್ಪಿನಂಗಡಿ, ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ. ಬಂದಾರು, ಗ್ರೋಮಾ ಕನ್‌ಸ್ಟ್ರಕ್ಷನ್ ಅಧಿಕಾರಿಗಳಾದ ಜಯರಾಮ್, ಮೋಹನ್ ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *