ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಬಲವಂತವಾಗಿ ಕಸಿದುಕೊಂಡ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ತೆಂಕಕಜೆಕಾರು ನಿವಾಸಿ ಹಾಗೂ ವೃದ್ಧೆ ಅವ್ವಮ್ಮ ಅವರ ಮೊಮ್ಮಗ ಶಬೀರ್ (33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು ₹5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆ.14ರಂದು ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿ, ಅವರ ಎರಡೂ ಕೈಗಳಲ್ಲಿದ್ದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ಗಾಯವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಸಾದಿಕ್ ಅವರು ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಿ, ಆ.16ರಂದು ಶಬೀರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಕಳುವಾದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕರಾದ ರೋಹಿಸಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿಪಿಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣೆ ಪಿಎಸ್ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ಸಹಕರಿಸಿದ್ದಾರೆ.


