ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ್ದ ಹಾಗೂ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಬಂಧಿತ ಆರೋಪಿ. ಜುಲೈ 24ರಂದು ನಗರದ ಕೋಡಿಕಲ್ನ ಮನೆಯೊಂದರ ಎದುರು ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದರು.

ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯ ಚಹರೆಯನ್ನು ಗುರುತಿಸಿ, ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಬಳಿಕ ಆರೋಪಿ ಹಾಗೂ ಕಳವಾಗಿದ್ದ ಸ್ಕೂಟರ್ ಅನ್ನು ಪತ್ತೆಹಚ್ಚಿ, ಆ.18ರಂದು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರದ ಬಂದರು, ಕೊಣಾಜೆ, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ ಗ್ರಾಮಾಂತರ ಹಾಗೂ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ ಕೂಡ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.



