Breaking
20 Aug 2026, Thu

ಡಿಸಿ ಮನ್ನಾ ಜಮೀನು ಹಂಚಿಕೆಗೆ ಆಗ್ರಹ: ಸಚಿವರನ್ನು ಭೇಟಿಯಾದ ದಲಿತ ನಾಯಕರ ನಿಯೋಗ

ಬೆಂಗಳೂರು: ಪ.ಜಾತಿ ಹಾಗೂ ಪ.ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ತಾಲೂಕಿನ ದಲಿತ ನಾಯಕರ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರ ನೇತೃತ್ವದಲ್ಲಿ ದಲಿತ ನಾಯಕರು ಬೆಂಗಳೂರಿನ ವಿಧಾನಸೌಧದಲ್ಲಿರುವ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ಡಿಸಿ ಮನ್ನಾ ಜಮೀನು ಹಂಚಿಕೆ ಕುರಿತು ಚರ್ಚಿಸಿದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಕುರಿತು ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಹಾಗೂ ಪ್ರಸ್ತುತ ಉಪ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಾಗಿರುವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಈ ವಿಚಾರದ ಕುರಿತು ಮಾತುಕತೆ ನಡೆಸಲಾಯಿತು.

ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ, ಕಾಂಗ್ರೆಸ್ ಪ್ರಣಾಳಿಕೆಯ ಭಾಗವಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆ ವಿಚಾರದಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಆದೇಶ ಹೊರಡಿಸುವಂತೆ ಮನವಿ ಮಾಡಲಾಯಿತು.

ಮನವಿಗೆ ಸ್ಪಂದಿಸಿದ ಯು.ಟಿ. ಖಾದರ್ ಅವರು, ವಿಧಾನಸಭಾ ಅಧಿವೇಶನ ಮುಗಿದ ಬಳಿಕ ತಮ್ಮ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಸಭೆ ಕರೆದು ಡಿಸಿ ಮನ್ನಾ ಜಮೀನು ಹಂಚಿಕೆ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಆದಿದ್ರಾವಿಡ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಮೂಡಬಿದಿರೆ, ದಸಂಸ ಮುಖಂಡರಾದ ಬಿ.ಕೆ. ವಸಂತ್, ಬೇಬಿ ಸುವರ್ಣ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರು, ರಮೇಶ್ ಆರ್., ರವಿಚಂದ್ರ ನಾಯ್ಕ್ ಮುಂಡಾಜೆ, ಪ್ರಭಾಕರ್ ಶಾಂತಿಗೋಡು, ಚೆನ್ನಕೇಶವ ಹಾಗೂ ಶೇಖರ್ ಲಾಯಿಲ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *