Breaking
20 Aug 2026, Thu

ಮಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಆರೋಪ; ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಜೇಶ್ವರ ವರ್ಕಾಡಿಯ ಮೊಹಮ್ಮದ್ ಇರ್ಷಾದ್ (30) ಹಾಗೂ ಕೇರಳದ ಕಣ್ಣೂರು ಮೂಲದ, ಮಂಗಳೂರಿನ ಕೊಂಚಾಡಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ನಿತಿನ್ ಕೃಷ್ಣನ್ (27) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಒಟ್ಟು 1.36 ಲಕ್ಷ ರೂ. ಮೌಲ್ಯದ 13.69 ಗ್ರಾಂ ಎಂಡಿಎಂಎ ಹಾಗೂ ಅಂದಾಜು 60 ಸಾವಿರ ರೂ. ಮೌಲ್ಯದ 1.206 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣ 1: ಆಟೋರಿಕ್ಷಾದಲ್ಲಿ ಎಂಡಿಎಂಎ ಮಾರಾಟ

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಮಂಗಳವಾರ ಪೊಲೀಸರಿಗೆ ಮಾಹಿತಿ ಲಭಿಸಿತ್ತು.

ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ ಪೊಲೀಸರು ಮೊಹಮ್ಮದ್ ಇರ್ಷಾದ್‌ನನ್ನು ಬಂಧಿಸಿದ್ದಾರೆ. ಆತನ ವಶದಲ್ಲಿದ್ದ 1.36 ಲಕ್ಷ ರೂ. ಮೌಲ್ಯದ ಎಂಡಿಎಂಎ, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾ ಸೇರಿದಂತೆ ಒಟ್ಟು ಅಂದಾಜು 2,94,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ 2: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಆರೋಪ

ಸೋಮವಾರ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ನಿತಿನ್ ಕೃಷ್ಣನ್ ಎಂಬಾತನ ಬಗ್ಗೆ ಮಾಹಿತಿ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ಮಂಗಳವಾರ ಕದ್ರಿಯ ಕ್ಲಿನಿಕ್‌ವೊಂದರಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ನಿತಿನ್ ಕೃಷ್ಣನ್ (27)ನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಆತನ ವಶದಲ್ಲಿದ್ದ ಅಂದಾಜು 60 ಸಾವಿರ ರೂ. ಮೌಲ್ಯದ 1 ಕೆ.ಜಿ. 206 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಕೆಟಿಎಂ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಿತಿನ್ ಕೃಷ್ಣನ್‌ನನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *