Breaking
10 Oct 2026, Sat

ಬರಾಯಕೆರೆ ಕಪ್ಪುಕಲ್ಲು ಗಣಿಗಾರಿಕೆ ವಿರುದ್ಧ ಜಿಲ್ಲಾಧಿಕಾರಿಗೆ ಮನವಿ

ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಕಪ್ಪುಕಲ್ಲು ಗಣಿಗಾರಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಬರಾಯಕೆರೆ ಸಂರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಸಮಿತಿ ಸದಸ್ಯರು, ಸ್ಥಳೀಯ ಭೂಮಾಲೀಕ ಶ್ರೀಕಾಂತ್ ಭಟ್ ಅವರು ಕೃಷಿ ಚಟುವಟಿಕೆಯ ಹೆಸರಿನಲ್ಲಿ ಕಳೆದ 25ಕ್ಕೂ ಹೆಚ್ಚು ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ, ಕಾನೂನುಬಾಹಿರವಾಗಿ ಸ್ಫೋಟಕಗಳನ್ನು ಬಳಸಲಾಗುತ್ತಿದ್ದು, ಇದರಿಂದ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಗಣಿಗಾರಿಕೆಯಿಂದ ಸ್ಥಳೀಯರ ಮನೆಗಳು ಬಿರುಕು ಬಿಟ್ಟಿದ್ದು, ಕೃಷಿ ಚಟುವಟಿಕೆಗಳಿಗೂ ಕಲ್ಲು ಹಾಗೂ ಕಲ್ಲಿನ ಪುಡಿಯಿಂದ ಹಾನಿಯಾಗುತ್ತಿದೆ ಎಂದು ಆರೋಪಿಸಲಾಗಿದೆ.

ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು ಹಾಗೂ ಮೋರಿಗಳು ಹಾನಿಗೊಳಗಾಗಿವೆ. ಐತಿಹಾಸಿಕ ಬರಾಯಕೆರೆ ಕೂಡ ಸಂಪೂರ್ಣ ಕಲುಷಿತಗೊಂಡಿದೆ ಎಂದು ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಂಬಂಧಪಟ್ಟ ಇಲಾಖೆಗಳ ಮುಂದೆ ತಪ್ಪು ಮಾಹಿತಿ ನೀಡಿ ಕೃಷಿ ಚಟುವಟಿಕೆಯ ಹೆಸರಿನಲ್ಲಿ ದೀರ್ಘಕಾಲದಿಂದ ಗಣಿಗಾರಿಕೆ ನಡೆಸುತ್ತಿದ್ದರೂ, ಯಾವುದೇ ಇಲಾಖೆಗಳು ಸೂಕ್ತ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಗಣಿಗಾರಿಕೆಯನ್ನು ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ಬರಾಯಕೆರೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ರಕ್ಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಶಾಂತ್ ವೇಗಸ್, ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ, ಹರೀಶ್ ಪೂಜಾರಿ, ಗಣೇಶ್ ದೇವಾಡಿಗ, ಮೇಲ್ವಿನ್ ಡಿಸೋಜ, ಪ್ರವೀಣ್ ನಿನ್ನಿಕಲ್ಲು, ಜೋನ್ ಡಿಸೋಜ, ದಿನೇಶ್ ಪೂಜಾರಿ, ಕೂಸ ಅಳದಂಗಡಿ ಹಾಗೂ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *