Breaking
12 Oct 2026, Mon

ಉಡುಪಿ: ಮುದರಂಗಡಿ ಡೇವಿಡ್ ಕೊಲೆ ಪ್ರಕರಣ; ನೈನಿತಾಲ್‌ನಲ್ಲಿ ಮತ್ತೋರ್ವ ಆರೋಪಿ ಬಂಧನ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಉಡುಪಿ: ಕಾಪು ತಾಲೂಕಿನ ಮುದರಂಗಡಿ ಜಂಕ್ಷನ್‌ನಲ್ಲಿ ಆ.7ರಂದು ಸಂಜೆ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತರ ಆರೋಪಿಗಳೊಂದಿಗೆ ಸೇರಿ ಅಪರಾಧ ಸಂಚು ರೂಪಿಸಿ ಕೃತ್ಯಕ್ಕೆ ಹಣಕಾಸು ಪೂರೈಕೆ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಉತ್ತರಾಖಂಡದ ನೈನಿತಾಲ್‌ನಲ್ಲಿ ಬಂಧಿಸಲಾಗಿದೆ.

ಬಂಧಿತನನ್ನು ಬಿಹಾರದ ಶೇಖ್‌ಪುರ ನಿವಾಸಿ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ನೈನಿತಾಲ್‌ನಲ್ಲಿ ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಆ.7ರಂದು ಸಂಜೆ 3.45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ರಾಜು, ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅವರನ್ನು ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ರಾಜು ಬಂಧನದ ವೇಳೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದು, ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದೇ ಪ್ರಕರಣದಲ್ಲಿ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧ ಸಂಚು ನಡೆಸಿ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಅವರನ್ನು ಬಳಿಕ ಬಂಧಿಸಲಾಗಿತ್ತು.

ಇದೀಗ ಸೂರಜ್ ಕುಮಾರ್‌ನನ್ನು ನೈನಿತಾಲ್‌ನಲ್ಲಿ ಬಂಧಿಸಲಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *