ಚಿತ್ರದುರ್ಗ: 53 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ನಡೆದಿದೆ.

ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ 53 ವಿದ್ಯಾರ್ಥಿಗಳಿದ್ದರು. ವಿದ್ಯಾರ್ಥಿಗಳೊಂದಿಗೆ ಮೂವರು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯೂ ಪ್ರವಾಸದಲ್ಲಿದ್ದರು ಎನ್ನಲಾಗಿದೆ.

ಐಮಂಗಲ ಸಮೀಪ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಉರುಳಿದೆ. ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ತೀವ್ರತೆಗೆ ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಮೃತಪಟ್ಟಿದ್ದಾರೆ. ಗಾಯಗೊಂಡ 15 ಮಂದಿಯನ್ನು ತಕ್ಷಣ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.


